top of page

ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಅಧಿಕಾರಿಗಳು: BJP ಖಂಡನೆ, ಕ್ಷಮೆಗೆ ಆಗ್ರಹ

  • Writer: new waves technology
    new waves technology
  • Apr 18
  • 2 min read

ಬೀದರ್​​ನ ಸಾಯಿ ಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ಒಪ್ಪದೇ ಗಣಿತ ಪರೀಕ್ಷೆಯಿಂದ ಹೊರಗುಳಿದಿದ್ದಾನೆ. ಇದರಿಂದ ಆತನ ಎಂಜಿನಿಯರಿಂಗ್ ಭವಿಷ್ಯ ಅತಂತ್ರಗೊಂಡಿದೆ.

ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಬೀದರ್​​ನ ಸಾಯಿ ಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ಒಪ್ಪದೇ ಗಣಿತ ಪರೀಕ್ಷೆಯಿಂದ ಹೊರಗುಳಿದಿದ್ದಾನೆ. ಇದರಿಂದ ಆತನ ಎಂಜಿನಿಯರಿಂಗ್ ಭವಿಷ್ಯ ಅತಂತ್ರಗೊಂಡಿದೆ.

ಬೀದರ್​​ನ ವಿದ್ಯಾರ್ಥಿ ಕಳೆದ ಬುಧವಾರ ಜನಿವಾರ ಧರಿಸಿ ಬೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದ. ಗುರುವಾರ ಗಣಿತ ಪರೀಕ್ಷೆಗೆ ಬಂದಾಗ ಜನಿವಾರ ನೋಡಿದ ಪರೀಕ್ಷಾ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿವಾರ ತೆಗೆಯಲ್ಲ, ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಬೇಡಿಕೊಂಡಿದ್ದಾನೆ. ಕೊನೆಗೆ ಪರೀಕ್ಷೆಯಿಂದಲೇ ಆತ ದೂರ ಉಳಿದಿದ್ದಾನೆ ಎಂದು ವರದಿಗಳು ತಿಳಿಸಿವೆ.

ಇದೇ ರೀತಿ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿ ಜನಿವಾರ ತೆಗೆಯಲ್ಲ ಎಂದಿದ್ದಕ್ಕೆ ಪರೀಕ್ಷಾ ಸಿಬ್ಬಂದಿ ಅದನ್ನು ಕತ್ತರಿಸಿರುವ ಆರೋಪ ಕೇಳಿಬಂದಿದೆ.

ಎರಡೂ ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಬೇಷರತ್​ ಕ್ಷಮೆಯಾಚಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ,ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.

ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ. ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪೋಸ್ಟ್ ಮಾಡಿ, ಕುಂಕುಮ ಕೇಸರಿ ಕಂಡರೆ ದ್ವೇಷ ಕಾರುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ಜನಿವಾರದ ವಿರುದ್ಧ ಹಗೆತನ ಮೆರೆಯುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಮಾನಸಿಕತೆಯನ್ನ ಪ್ರದರ್ಶನ ಮಾಡಿದ್ದಾರೆಂದು ಕಿಡಿಕಾರಿದ್ದಾರೆ.

ತೀರ್ಥಹಳ್ಳಿಯಲ್ಲಿ ಸಿಇಟಿ ಪರೀಕ್ಷೆ ವೇಳೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಜನಿವಾರ ತೆಗೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ಬೀದರ್ ನಲ್ಲಿ ಜನಿವಾರ ತೆಗೆಯಲೊಪ್ಪದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಹಾಜರಾಗಲು ಬಿಡದೆ ವಿದ್ಯಾರ್ಥಿಯ ಭವಿಷ್ಯವನ್ನ ಹಾಳು ಮಾಡಿದೆ ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ. ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆಗಳು ಅತ್ಯಂತ ಖಂಡನೀಯವಾಗಿದ್ದು, ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆಂದು ಹೇಳಿದ್ದಾರೆ.

Comments


bottom of page