top of page

ಕಾಂಗ್ರೆಸ್ ಆಡಳಿತದಡಿ ರಾಜ್ಯದ ಖಜಾನೆ ಸಂಪೂರ್ಣ ಖಾಲಿ: ಬಿಜೆಪಿ ಆರೋಪ

Writer: new waves technologynew waves technology

ಕೇಂದ್ರ ಸರ್ಕಾರ ಐದು ಕಿಲೋ ಅಕ್ಕಿ ನೀಡುತ್ತಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಸಮನಾದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿಲ್ಲ. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಐದಾರು ತಿಂಗಳಿಂದ ವೇತನ ನೀಡಿಲ್ಲ..

ಬೆಂಗಳೂರು: ಕಾಂಗ್ರೆಸ್ ಆಡಳಿತದಡಿ ಕರ್ನಾಟಕ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಹಾಲಿನ ದರವನ್ನು ಲೀಟರ್‌ಗೆ 5 ರೂಪಾಯಿ ಹೆಚ್ಚಿಸುವುದಾಗಿ ಸರ್ಕಾರ ಪ್ರಕಟಿಸಿದೆ. ಆದರೆ ಇದು ಯಾವಾಗ ಜಾರಿಗೆ ಬರುತ್ತದೆ ಎಂಬುದು ಸ್ಪಷ್ಟವಾಗಿಲ್ಲ ಎಂದರು.

ಕೇಂದ್ರ ಸರ್ಕಾರ ಐದು ಕಿಲೋ ಅಕ್ಕಿ ನೀಡುತ್ತಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಸಮನಾದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿಲ್ಲ. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಐದಾರು ತಿಂಗಳಿಂದ ವೇತನ ನೀಡಿಲ್ಲ ಎಂದು ದೂರಿದರು.

ಮೆಟ್ರೋ ಪ್ರಯಾಣ ದರ ಏರಿಕೆಯಾಗಿದ್ದು, ಹಾಲು, ವಿದ್ಯುತ್ ದರವೂ ಏರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದ್ದು, ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.


ಕೊಪ್ಪಳ, ಹಾವೇರಿ, ಚಾಮರಾಜನಗರ ಮತ್ತು ಬೀದರ್‌ನಂತಹ ಹಿಂದುಳಿದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾದ ವಿಶ್ವವಿದ್ಯಾನಿಲಯಗಳನ್ನು ಕರ್ನಾಟಕ ಸರ್ಕಾರ ಮುಚ್ಚುತ್ತಿದೆ. ಈ ನಿರ್ಧಾರವು ಈ ಪ್ರದೇಶದ ವಿದ್ಯಾರ್ಥಿಗಳಿಗೆ ತೀವ್ರ ಹಿನ್ನಡೆಯಾಗಿದ್ದು, "ಮೂರ್ಖತನದ ಪರಮಾವಧಿ" ಎಂದು ಬಣ್ಣಿಸಿದರು.

ಹಿಂದುಳಿದ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶವನ್ನು ಹೆಚ್ಚಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಆದರೆ, ಇವುಗಳನ್ನು ಮುಚ್ಚುವ ನಿರ್ಧಾರ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತಾಗಿದ್ದು, ಸಂಬಳ ನೀಡಲು ಸರ್ಕಾರಕ್ಕೆ ಹಣವಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವುದು ಎಷ್ಟು ನ್ಯಾಯ ಎಂದು ಪ್ರಶ್ನಿಸಿದರು. ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.


ಉದಯಗಿರಿ ಪೊಲೀಸ್ ದಾಳಿ ಘಟನೆಯನ್ನು ಉಲ್ಲೇಖಿಸಿದ ರವಿಕುಮಾರ್ , ಹಿಂಸಾಚಾರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು, ಮುಖಂಡರು ಮತ್ತು ಸ್ವಯಂಸೇವಕರು ಭಾಗಿಯಾಗಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ಅವರ ಹೇಳಿಕೆ ಪುರಸ್ಕರಿಸುವ ಯಾವುದಾದರೂ ತನಿಖೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದ ರವಿಕುಮಾರ್, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.

Commentaires


bottom of page